ಬೆಂಗಳೂರು: ಸುರಕ್ಷಿತ ಪಾದಾಚಾರಿ ಮಾರ್ಗ (ಫುಟ್‌ಪಾತ್) ಅಭಿಯಾನದಲ್ಲಿ ಸರ್ಕಾರಿ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸಿದ ಪ್ರತಿಯೊಬ್ಬರನ್ನೂ ಬಂಧಿಸಲಾಗುವುದು ಎಂದು ಜಿಬಿಎ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಈ ಬಗ್ಗೆ ಪೊಲೀಸ್ ಆಯುಕ್ತರು ಮತ್ತು ಬಿಬಿಎಂಪಿ (GBA) ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ. ಇವರು ಜೀವನೋಪಾಯಕ್ಕಾಗಿ ಕಷ್ಟಪಟ್ಟು ದುಡಿಯುವ ಬಡಜನರಲ್ಲ. ಇವರು ಸಮಾಜಘಾತುಕ ಶಕ್ತಿಗಳು. ಮಾನ್ಯ ಸರ್ವೋಚ್ಚ ನ್ಯಾಯಾಲಯದ ನಿರ್ದೇಶನವನ್ನು ಜಾರಿಗೊಳಿಸುವಾಗ ಸರ್ಕಾರಿ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸುವುದು ಕಾನೂನಿನ ಗಂಭೀರ ಉಲ್ಲಂಘನೆಯಾಗಿದೆ ಎಂದಿದ್ದಾರೆ.
ಕಾನೂನಿನಂತೆ ಸಾರ್ವಜನಿಕ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳ ಪರವಾಗಿ ನಾವು ದೃಢವಾಗಿ ನಿಲ್ಲುತ್ತೇವೆ. ಸಾರ್ವಜನಿಕ ಕರ್ತವ್ಯದಲ್ಲಿರುವ ಅಧಿಕಾರಿಗಳ ಮೇಲೆ ಹಲ್ಲೆ ನಡೆಸುವ ಯಾರನ್ನೂ ಸಹ ನಾವು ಬಿಡುವುದಿಲ್ಲ. ನಾನು ಜಿಬಿಎ (GBA) ಮತ್ತು ಪೊಲೀಸರೊಂದಿಗೆ ಸತತ ಸಂಪರ್ಕದಲ್ಲಿದ್ದು ಪರಿಸ್ಥಿತಿಯನ್ನು ಗಮನಿಸುತ್ತಿದ್ದೇನೆ. ಅಲ್ಲದೆ ನಾವು ಒಟ್ಟಾಗಿ ಮಾದರಿಯಾಗುವಂತಹ ಕಠಿಣ ಕ್ರಮಗಳನ್ನು ಜರುಗಿಸುತ್ತಿದ್ದೇವೆ ಎಂದಿದ್ದಾರೆ..
ಈಗಾಗಲೇ 5 ಜನ ದಾಳಿಕೋರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಾಳಿಯ ಹಿಂದಿನ ಪ್ರಮುಖ ಸೂತ್ರಧಾರ ಬಸವರಾಜ ಪುದುಕೋಟೆ ಅವರನ್ನು ಶೀಘ್ರದಲ್ಲೇ ಬಂಧಿಸಲಾಗುವುದು. ಎಲ್ಲಾ ದಾಳಿಕೋರರ ಮೇಲೆಯೂ ಸೆಕ್ಷನ್ 307 ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದಿದ್ದಾರೆ.

