ಎಸ್.ಎಂ ಕೃಷ್ಣ ಆರೋಗ್ಯ ಸ್ಥಿರ:ವಿವಿಧ ಗಣ್ಯರಿಂದ ಆರೋಗ್ಯ ವಿಚಾರಣೆ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಎಸ್.ಎಂ.ಕೃಷ್ಣ ಅವರ ಆರೋಗ್ಯ ವಿಚಾರಿಸಲು ಅನೇಕ ಗಣ್ಯರು ಆಗಮಿಸುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಎಸ್.ಎಂ.ಕೃಷ್ಣ ಅವರು, ಸಿದ್ದರಾಮಯ್ಯ ಅವರ ಜತೆಗೆ ಲವಲವಿಕೆಯಿಂದಲೇ ಮಾತನಾಡಿದರು ಎನ್ನಲಾಗಿದೆ.
ಮಂಗಳವಾರ ಮಧ್ಯಾಹ್ನದ ನಂತರ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ, ಎಸ್.ಎಂ.ಕೃಷ್ಣ ಅವರ ಆರೋಗ್ಯ ವಿಚಾರಿಸಿದರು. ಹೀಗೆ ಎಲ್ಲ ಪಕ್ಷದ ಪ್ರಮುಖ ನಾಯಕರು ಎಸ್.ಎಂ.ಕೃಷ್ಣ ಅವರ ಭೇಟಿ ಮಾಡಿ, ಆರೋಗ್ಯ ವಿಚಾರಿಸುತ್ತಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಭೇಟಿ: ಬೆಂಗಳೂರು: ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ ಮಲ್ಲಿಕಾರ್ಜುನ ಖರ್ಗೆ ಅವರು, ಎಸ್.ಎಂ.ಕೃಷ್ಣ ಅವರದ್ದು ಶಿಸ್ತುಬದ್ಧ ಜೀವನ. ಅವರ ಸಂಪುಟದಲ್ಲಿ ಸಚಿವನಾಗಿ ಕಾರ್ಯನಿರ್ವಹಿಸಿದ್ದೆ. ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿದೆ ಎಂದು ವೈದ್ಯರು ತಿಳಿಸಿದ್ದು ಶೀಘ್ರ ಗುಣಮುಖರಾಗಲಿದ್ದಾರೆ ಎಂದು ಹೇಳಿದರು.
ಅನಾರೋಗ್ಯದ ಹಿನ್ನೆಲೆಯಲ್ಲಿ ಎಸ್ ಎಂ ಕೃಷ್ಣ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ತಿಳಿಯಿತ್ತು. ಹೀಗಾಗಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದೇನೆ. ಆದಷ್ಟು ಬೇಗ ಗುಣಮುಖರಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ವೇಳೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿಜಯ್ ಕೆ.ಮುಳುಗುಂದ್, ಶಾಸಕರಾದ ದಿನೇಶ್ ಗೂಳಿಗೌಡ ಅವರು ಜೊತೆಯಲ್ಲಿದ್ದರು.