ನವದೆಹಲಿ: ಕೇತಗಾನಹಳ್ಳಿಯಲ್ಲಿ ಜಮೀನು ಒತ್ತುವರಿ ಮಾಡಿದ ಆರೋಪದ ಪ್ರಕರಣದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧದ ನ್ಯಾಯಾಂಗ ನಿಂದನೆ ವಿಚಾರಣೆಗೆ ಸುಪ್ರೀಂಕೋರ್ಟ್ ತಡೆ ನೀಡಿದೆ.
ಕರ್ನಾಟಕ ಹೈಕೋರ್ಟ್ ನಲ್ಲಿ ತಮ್ಮನ್ನು ನ್ಯಾಯಾಂಗ ನಿಂದನೆ ಆರೋಪದಡಿ ಆರೋಪಿಯನ್ನಾಗಿ ಮಾಡಿದ್ದನ್ನು ಪ್ರಶ್ನಿಸಿ ಕುಮಾರಸ್ವಾಮಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಂಕಜ್ ಮಿಥಲ್ ಹಾಗೂ ನ್ಯಾ. ಪ್ರಸನ್ನ ಬಿ.ವರಾಳೆ ಅವರಿದ್ದ ಪೀಠವು, ಮುಂದಿನ ಆದೇಶದವರೆಗೆ ಕುಮಾರಸ್ವಾಮಿ ವಿರುದ್ಧ ಯಾವುದೇ ವಿಚಾರಣೆ ನಡೆಸದಂತೆ ಆದೇಶಿಸಿದೆ.
ಹೆಚ್ಡಿಕೆ ವಿರುದ್ಧ ನ್ಯಾಯಾಂಗ ನಿಂದನೆ ಆರೋಪ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಮೇಲೆ ನ್ಯಾಯಾಂಗ ನಿಂದನೆ ಆರೋಪ ಹೊರಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಬಿಡದಿ ತಾಲೂಕಿನ ಕೇತಗಾನಹಳ್ಳಿ ವ್ಯಾಪ್ತಿಯಲ್ಲಿ ಕುಮಾರಸ್ವಾಮಿ ಮತ್ತವರ ಸಂಬಂಧಿಕರು ಭೂ ಕಬಳಿಕೆ ಮಾಡಿರುವ ಆರೋಪ ಸಂಬಂಧ ಲೋಕಾಯುಕ್ತ ಜಾಗವನ್ನು ತೆರವು ಮಾಡುವಂತೆ ಆದೇಶಿಸಿತ್ತು.
ಈ ಕುರಿತ ಆದೇಶವನ್ನು ಜಾರಿಗೊಳಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಸಮಾಜ ಪರಿವರ್ತನಾ ಸಮುದಾಯದ ಎಸ್.ಆರ್. ಹಿರೇಮಠ ಅವರು ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ್ದ ಕೋರ್ಟ್, ಕುಮಾರಸ್ವಾಮಿ ಅವರನ್ನು ಪ್ರಕರಣದಲ್ಲಿ ವಿಚಾರಣೆ ಎದುರಿಸಲು ಸೂಚಿಸಿತ್ತು.
ಇದೇ ಪ್ರಕರಣಕ್ಕೆ ಸುಪ್ರೀಂಕೋರ್ಟ್ನಲ್ಲಿ ವಿಚಾರಣೆ ಬಾಕಿ ಇರುವ ಸಂಬಂಧ ಹೈಕೋರ್ಟ್ನಲ್ಲಿ ದಾಖಲಾದ ಅರ್ಜಿ ವಿಚಾರಣೆಗೆ ತಡೆ ನೀಡಬೇಕು ಎಂದು ಕೇಂದ್ರ ಸಚಿವರು ಮನವಿ ಮಾಡಿದ್ದರು. ಇದನ್ನು ಪುರಸ್ಕರಿಸಿದ್ದ ಹೈಕೋರ್ಟ್, ಬಲವಂತದ ಕ್ರಮ ಜರುಗಿಸದಂತೆ ಸೂಚಿಸಿ ವಿಚಾರಣೆ ಮುಂದೂಡಿತ್ತು.
ಇದೀಗ, ಸುಪ್ರೀಂಕೋರ್ಟ್ ಕೂಡ ನ್ಯಾಯಾಂಗ ನಿಂದನೆ ಆರೋಪದಡಿ ಕೇಂದ್ರ ಸಚಿವರ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸುವಂತಿಲ್ಲ ಎಂದು ಸೂಚಿಸಿ ವಿಚಾರಣೆಗೆ ತಡೆ ನೀಡಿದೆ.
ಪ್ರಕರಣದ ಹಿನ್ನೆಲೆ: 2014 ರಲ್ಲಿ ಬಿಡದಿಯ ಕೇತಗಾನಹಳ್ಳಿ ವ್ಯಾಪ್ತಿಯಲ್ಲಿ ಸರ್ಕಾರಿ ಜಮೀನು ಒತ್ತುವರಿ ಮಾಡಿದ ಆರೋಪದಲ್ಲಿ, ಅದರ ತೆರವಿಗೆ ಕರ್ನಾಟಕ ಲೋಕಾಯುಕ್ತ ಸೂಚಿಸಿತ್ತು. ಆದರೆ, ಈ ಸೂಚನೆಯ ಬಳಿಕವೂ ಅಧಿಕಾರಿಗಳು ಕ್ರಮ ಜರುಗಿಸಿರಲಿಲ್ಲ. ಇದರ ವಿರುದ್ಧ ಸಮಾಜ ಪರಿವರ್ತನಾ ಸಮಾಜ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ವಿಚಾರಣೆಯ ವೇಳೆ 3 ತಿಂಗಳಲ್ಲಿ ತೆರವು ಮಾಡುವಂತೆ ಹೈಕೋರ್ಟ್ ಗಡುವು ನೀಡಿತ್ತು.
ಆದಾಗ್ಯೂ ಅಧಿಕಾರಿಗಳು ತೆರವು ಮಾಡಿರಲಿಲ್ಲ. ಇದು ನ್ಯಾಯಾಂಗ ನಿಂದನೆ ಎಂದು ಆರೋಪಿಸಿ ಎಸ್.ಆರ್. ಹಿರೇಮಠ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.