ಬೆಂಗಳೂರು: ಜಿಬಿಎ ವ್ಯಾಪ್ತಿಯ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ವಾರ್ಡ್‌ಗಳ ಕೆಲ ಪ್ರದೇಶಗಳನ್ನು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಾರ್ಡ್‌ಗಳಿಗೆ ಸೇರಿಸಿರುವುದನ್ನು ಆಕ್ಷೇಪಿಸಿ, ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಕೃಷ್ಣಪ್ಪ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಮಂಗಳವಾರ ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ರಾಜ್ಯ ಸರ್ಕಾರ, ಜಿಬಿಎ ಮುಖ್ಯ ಆಯುಕ್ತ, ದಕ್ಷಿಣ ನಗರ ಪಾಲಿಕೆ ಆಯುಕ್ತ, ವಾರ್ಡ್ ಮರುವಿಂಗಡಣೆ ಆಯೋಗ, ರಾಜ್ಯ ಚುನಾವಣಾ ಆಯೋಗ ಹಾಗೂ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ನೋಟಿಸ್ ಜಾರಿಗೊಳಿಸಿತು.
ಅಲ್ಲದೇ, ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ವಾರ್ಡ್‌ಗಳ ಕೆಲ ಪ್ರದೇಶಗಳನ್ನು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಾರ್ಡ್‌ಗಳಿಗೆ ಸೇರಿಸಲಾಗಿದೆಯೇ ಎಂಬುದರ ಕುರಿತು ಸ್ಪಷ್ಟನೆ ನೀಡುವಂತೆ ಸರ್ಕಾರದ ವಕೀಲರಿಗೆ ನಿರ್ದೇಶನ ನೀಡಿ, ಅರ್ಜಿ ವಿಚಾರಣೆಯನ್ನು ಫೆಬ್ರವರಿ 18ಕ್ಕೆ ಮುಂದೂಡಿತು.
ಪ್ರಕರಣದ ವಿವರ: ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಳೇನಹಳ್ಳಿ ವಾರ್ಡ್‌ನ ಅಕ್ಷಯನಗರ ಹಾಗೂ ಅದರ ಸುತ್ತಲಿನ ಪ್ರದೇಶಗಳನ್ನು ಮತ್ತು ಕೊತ್ತನೂರು ವಾರ್ಡ್‌ನ ಕ್ಲಾಸಿಕ್ ಆರ್ಚರ್ಡ್ ಪ್ರದೇಶವನ್ನು ಕ್ರಮವಾಗಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವಿಜಯಾ ಬ್ಯಾಂಕ್ ಲೇಔಟ್ ವಾರ್ಡ್ ಮತ್ತು ದೊರೆಸಾನಿ ಪಾಳ್ಯ ವಾರ್ಡ್‌ಗೆ ಸೇರಿಸಿರುವುದನ್ನು ಅರ್ಜಿಯಲ್ಲಿ ಆಕ್ಷೇಪಿಸಲಾಗಿದೆ.
ಒಂದು ವಾರ್ಡನ್ನು ಎರಡು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಗೆ ಸೇರಿಸುವುದು ಜಿಬಿಎ ಕಾಯ್ದೆ ಮತ್ತು ವಾರ್ಡ್ ಮರು ವಿಂಗಡಣೆ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ. ಆದ್ದರಿಂದ ಎಳೇನಹಳ್ಳಿ ವಾರ್ಡ್‌ನ ಅಕ್ಷಯನಗರ ಹಾಗೂ ಅದರ ಸುತ್ತಲಿನ ಪ್ರದೇಶಗಳನ್ನು ಮತ್ತು ಕೊತ್ತನೂರು ವಾರ್ಡ್‌ನ ಕ್ಲಾಸಿಕ್ ಆರ್ಚರ್ಡ್ ಪ್ರದೇಶವನ್ನು ಕ್ರಮವಾಗಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವಿಜಯಾ ಬ್ಯಾಂಕ್ ಲೇಔಟ್ ವಾರ್ಡ್ ಮತ್ತು ದೊರೆಸಾನಿ ಪಾಳ್ಯ ವಾರ್ಡ್‌ಗೆ ಸೇರಿಸಿ ಹೊರಡಿಸಿರುವ ಅಧಿಸೂಚನೆ ರದ್ದು ಮಾಡಬೇಕು. ಬೊಮ್ಮನಳ್ಳಿ ವಿಧಾನಸಭಾ ಕ್ಷೇತ್ರದ ವಾರ್ಡ್‌ಗಳಿಗೆ ಸೇರಿಸಿರುವ ಪ್ರದೇಶಗಳನ್ನು ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಾರ್ಡ್‌ಗಳಿಗೆ ಮರು ಸೇರಿಸಲು ಸೂಚಿಸಬೇಕು ಎಂದು ಹೈಕೋರ್ಟ್ಗೆ ಸಲ್ಲಿಸಿರುವ ಅರ್ಜಿಯಲ್ಲಿ ಕೋರಲಾಗಿದೆ.

