ನವದೆಹಲಿ: ತೀವ್ರ ಬರಗಾಲದಂತಹ ಸಂಕಷ್ಟದ ಪರಿಸ್ಥಿತಿ ನಡುವೆಯೂ ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರು ಹರಿಸಬೇಕೆಂದು ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯೂಆರ್ಸಿ) ನೀಡಿರುವ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸುವುದಾಗಿ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ದೆಹಲಿಯ ಕರ್ನಾಟಕ ಭವನದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಡಬ್ಲ್ಯೂಆರ್ಸಿ ನೀಡಿರುವ ಶಿಫಾರಸನ್ನು ಪ್ರಶ್ನಿಸಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯೂಎಂಎ) ಕ್ಕೆ ಮೇಲ್ಮನವಿ ಸಲ್ಲಿಸಲಾಗುವುದು. ಈ ಸಂಬಂಧ ಕಾನೂನು ತಜ್ಞರ ಜೊತೆ ಚರ್ಚಿಸುತ್ತೇವೆ ಎಂದು ತಿಳಿಸಿದರು.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾನೂನು ತಜ್ಞರು ಹಾಗೂ ಜಲಸಂಪನೂಲ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಲಿದ್ದೇವೆ. ತಕ್ಷಣವೇ ಸಿಡಬ್ಲ್ಯೂಎಂಎಗೆ ಮೇಲ್ಮನವಿ ಸಲ್ಲಿಸಲಾಗುತ್ತದೆ. ಸಿಡಬ್ಲ್ಯೂಆರ್ಸಿ ಶಿಫಾರಸನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಲ್ಲಿ ಪ್ರಶ್ನೆ ಮಾಡಲು ಅವಕಾಶವಿದೆ. ನಮಗೆ ಕುಡಿಯಲು ನೀರಿಲ್ಲ. ಇಂತ ಸಂಕಷ್ಟದ ಸಂದರ್ಭದಲ್ಲಿ ನೀರು ಹರಿಸುವುದಾದರೂ ಹೇಗೆ? ಎಂದು ಸಚಿವ ರಾಮಲಿಂಗಾರೆಡ್ಡಿ ಪ್ರಶ್ನಿಸಿದ್ದಾರೆ.
ಈಗಾಗಲೇ ಮೇಲ್ಮನವಿ ಸಲ್ಲಿಸುವ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಕರ್ನಾಟಕದ ಹಿತ ಕಾಪಾಡಲು ಸರ್ಕಾರ ಬದ್ಧವಾಗಿದೆ. ಕಾನೂನು ಹೋರಾಟದ ಮೂಲಕವೇ ರೈತರ ಹಿತ ಕಾಪಾಡುತ್ತೇವೆ ಎಂದು ಸಚಿವರು ಭರವಸೆ ನೀಡಿದ್ದಾರೆ.
ಮೇಕೆದಾಟು ಯೋಜನೆಗೆ ಚಾಲನೆ : ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ. ಮೇಕೆದಾಟು ಯೋಜನೆ ಬಗ್ಗೆ ಸ್ಪಷ್ಟತೆ ಇದೆ. ಕೇಂದ್ರ ಸರ್ಕಾರದಿಂದ ಶೀಘ್ರದಲ್ಲೇ ಅನುಮತಿ ಸಿಗುವ ಸಾಧ್ಯತೆ ಇದೆ. ಯೋಜನೆ ಕುರಿತು ತಮಿಳುನಾಡಿನ ಆಕ್ಷೇಪಣೆಗಳನ್ನು ಸುಪ್ರೀಂ ಕೋರ್ಟ್ ಪರಿಗಣಿಸಿಲ್ಲ. ಯೋಜನೆ ಆರಂಭಿಸಲು ಯಾವುದೇ ಸಮಸ್ಯೆಗಳಿಲ್ಲ. ವಿಸ್ತೃತ ಯೋಜನಾ ವರದಿಯಲ್ಲಿ ಸ್ವಲ್ಪ ಬದಲಾವಣೆ ಮಾಡಿ ಶೀಘ್ರವೇ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.

