ಚನ್ನರಾಯಪಟ್ಟಣ : ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು, ಆಕೆಯ ಪತಿಯೇ ವರದಕ್ಷಿಣೆಗಾಗಿ ಕೊಲೆ ಮಾಡಿದ್ದಾನೆ ಎಂದು ಆಕೆಯ ಕುಟುಂಬಸ್ಥರು ಆರೋಪಿಸಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಅಂಕನಹಳ್ಳಿಯಲ್ಲಿ ಗ್ರಾಮದ ಚಂದ್ರಕಲಾ(27) ಎಂಬ ಮಹಿಳೆ ಮೃತಪಟ್ಟಿದ್ದು, ಬೆಳಗ್ಗಿನ ಜಾವ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು. ಸ್ಥಳಕ್ಕೆ ಆಗಮಿಸಿದ ಆಕೆಯ ಪೋಷಕರು ಗಂಡ ವರದಕ್ಷಿಣೆ ಕಿರಕುಳ ನೀಡಿ, ಆಕೆಯನ್ನು ಕೊಲೆ ಮಾಡಿ ನೇತು ಹಾಕಿದ್ದಾನೆ ಎಂದು ಆರೋಪಿಸಿದ್ದಾರೆ.
ಚಂದ್ರಕಲಾ ಪತಿ ಆನಂದ್ (35) ತಾಲೂಕಿನ ಅಂಕನಹಳ್ಳಿ ಗ್ರಾಮದವರಾಗಿದ್ದು, ಮಂಡ್ಯ ಜಿಲ್ಲೆ ಕೆ.ಆರ್. ಪೇಟೆ ತಾಲೂಕಿನ ಹೆಗ್ಗಡಿಹಳ್ಳಿ ಗ್ರಾಮದ ಚಂದ್ರಕಲಾರನ್ನು ಏಳು ವರ್ಷದ ಹಿಂದೆ ವಿವಾಹವಾಗಿದ್ದರು. ಆದರೆ, ಕುಡಿತದ ಚಟಕ್ಕೆ ಬಿದ್ದಿದ್ದ ಆನಂದ್ ಆಗಾಗ ಚಂದ್ರಕಲಾಗೆ ಹೊಡೆಯುತ್ತಿದ್ದು, ಆಕೆಯನ್ನು ಕೊಲೆ ಮಾಡಿ ನೇಣು ಹಾಕಿದ್ದಾನೆ ಎಂದು ಆರೋಪಿಸಿದ್ದಾರೆ.
ಇತ್ತೀಚೆಗೆ ಆನಂದ್ ವಿಪರೀತ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ಸಾಲ ತೀರಿಸುವ ಸಲುವಾಗಿ ತವರು ಮನೆಯಿಂದ ಹಣ ತರುವಂತೆ ಪೀಡಿಸುತ್ತಿದ್ದ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಇದೀಗ ನೆನ್ನೆ ರಾತ್ರಿ ಕೊಲೆ ಮಾಡಿ ನೇಣು ಹಾಕಿ ಪರಾರಿಯಾಗಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ. ಆರೋಪಿ ಆನಂದ್ ನಾಪತ್ತೆಯಾಗಿದ್ದು, ಶ್ರವಣಬೆಳಗೊಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.