ಬಳ್ಳಾರಿ: ಜಿಲ್ಲೆಯ ಕುರುಗೋಡು ತಾಲೂಕಿನ ಕ್ಯಾದಿಗೆ ಹಾಳು ಗ್ರಾಮದಲ್ಲಿ ಮೊಹರಂ ಹಬ್ಬದ ಅಂಗವಾಗಿ ನಡೆದ ಧಾರ್ಮಿಕ ಕಾರ್ಯಕ್ರಮದ ವೇಳೆ ಬೆಂಕಿ ತುಳಿಯುವ ಸಂದರ್ಭದಲ್ಲಿ ತೀವ್ರವಾಗಿ ಸುಟ್ಟು ಗಾಯಗೊಂಡಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಮೃತಪಟ್ಟಿದ್ದಾರೆ.
ಮೃತರನ್ನು ದೇವೇಂದ್ರ (28) ಎಂದು ಗುರುತಿಸಲಾಗಿದೆ. ಮಸೀದಿ ಮುಂಭಾಗದಲ್ಲಿ ಅಲಾಯಿ ಕುಣಿಯ ಬೆಂಕಿಯಲ್ಲಿ ನಡೆದುಕೊಂಡು ಹೋಗುವ ವೇಳೆ ದೇವೇಂದ್ರ ಅವರ ಕಾಲು ಜಾರಿ ಬೆಂಕಿಗೆ ಬಿದ್ದಿದ್ದರು. ಪರಿಣಾಮ ದೇಹದ ಹಲವು ಭಾಗಗಳಿಗೆ ತೀವ್ರ ಸುಟ್ಟ ಗಾಯಗಳಾಗಿದ್ದವು.
ಅವರನ್ನು ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶುಕ್ರವಾರ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಬೆಳಗ್ಗೆ ಅವರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಘಟನೆ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಿಸಿದೆ. ಈ ಕುರಿತು ಕುರುಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

